SSLC, PUC ಪರೀಕ್ಷೆಗಳ ದಿನಾಂಕ ಬದಲಾಗುತ್ತಾ?

ಬೆಂಗಳೂರು: ರಾಜ್ಯದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ. ಜನಗಣತಿ ಕಾರ್ಯದ ಹಿನ್ನೆಲೆಯಲ್ಲಿ ಫೆಬ್ರವರಿ ಮತ್ತು ಮಾರ್ಚ್ನಲ್ಲಿ ನಡೆಯಲಿರುವ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪಬ್ಲಿಕ್ ಪರೀಕ್ಷೆಗಳು ಮುಂದೂಡಿಕೆಯಾಗುವ ಸಾಧ್ಯತೆ ಇದೆ.
ಕೇಂದ್ರ ಸರ್ಕಾರದ ಜನಗಣತಿಯ ಎರಡನೇ ಹಂತದ ಕಾರ್ಯಾಚರಣೆ ಜನವರಿ 25ರಿಂದ ಫೆಬ್ರವರಿ 28ರವರೆಗೆ ನಡೆಯಲಿದ್ದು, ಮಾರ್ಚ್ 1ರಿಂದ 5ರವರೆಗೆ ಪರಿಷ್ಕರಣಾ ಸುತ್ತು ನಡೆಯಲಿದೆ ಎಂದು ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಪರೀಕ್ಷೆಗಳ ವೇಳಾಪಟ್ಟಿಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಪರೀಕ್ಷೆಗಳನ್ನು ಮುಂದೂಡುವಂತೆ ಕೇಂದ್ರ ಜನಗಣತಿ ಕಾರ್ಯಾಚರಣೆ ನಿರ್ದೇಶನಾಲಯವು ರಾಜ್ಯದ ಶಾಲಾ ಶಿಕ್ಷಣ ಇಲಾಖೆಗೆ ಪತ್ರ ಬರೆದು ಮನವಿ ಮಾಡಿದೆ.
ಜನಗಣತಿ ಕಾರ್ಯದಲ್ಲಿ ಶಿಕ್ಷಕರು ಹಾಗೂ ಸಿಬ್ಬಂದಿ ತೊಡಗಿಸಿಕೊಳ್ಳಬೇಕಾದ ಹಿನ್ನೆಲೆಯಲ್ಲಿ ಪರೀಕ್ಷೆಗಳ ದಿನಾಂಕಗಳನ್ನು ಮರುಪರಿಶೀಲಿಸುವಂತೆ ಮನವಿ ಮಾಡಲಾಗಿದೆ.
ಆದರೆ, ಪರೀಕ್ಷೆಗಳನ್ನು ಮುಂದೂಡುವ ಕುರಿತು ರಾಜ್ಯದ ಶಾಲಾ ಶಿಕ್ಷಣ ಇಲಾಖೆಯಿಂದ ಅಧಿಕೃತ ನಿರ್ಧಾರ ಪ್ರಕಟವಾಗುವವರೆಗೆ ವಿದ್ಯಾರ್ಥಿಗಳು ಆತಂಕಪಡುವ ಅಗತ್ಯವಿಲ್ಲ. ಅಧಿಕೃತ ವೇಳಾಪಟ್ಟಿ ಹಾಗೂ ಮುಂದಿನ ಪ್ರಕಟಣೆಗಳಿಗಾಗಿ ಇಲಾಖೆಯ ಮಾಹಿತಿಯನ್ನು ಗಮನಿಸುವುದು ಸೂಕ್ತ.



