ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪ್ರಾದೇಶಿಕ ನಗರೀಕರಣ ಯೋಜನೆ–2047

ಬೆಂಗಳೂರು: ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಬೆಂಗಳೂರು ಮಾತ್ರವಲ್ಲದೆ ಎಲ್ಲಾ ಜಿಲ್ಲೆಗಳಲ್ಲೂ ಸಮಾನ ಅಭಿವೃದ್ಧಿ ಸಾಧಿಸುವುದು ಅಗತ್ಯವಾಗಿದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಿದ್ದ ‘ಕರ್ನಾಟಕ ರಾಜ್ಯ ಪ್ರಾದೇಶಿಕ ನಗರೀಕರಣ ಯೋಜನೆ – 2047’ ವರದಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಮೇಲಿನ ಜನಸಂಖ್ಯೆ ಮತ್ತು ಮೂಲಸೌಕರ್ಯಗಳ ಒತ್ತಡವನ್ನು ಕಡಿಮೆ ಮಾಡಿ, ರಾಜ್ಯದ ವಿವಿಧ ಭಾಗಗಳಲ್ಲಿ ಸಮತೋಲಿತ ಅಭಿವೃದ್ಧಿ ಸಾಧಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದರು.
‘ನವೋದಯ ಕರ್ನಾಟಕ 2047’ ಪರಿಕಲ್ಪನೆಯಡಿ ರಾಜ್ಯವನ್ನು ಏಳು ಪ್ರಮುಖ ಪ್ರಾದೇಶಿಕ ವಲಯಗಳಾಗಿ ಗುರುತಿಸಲಾಗಿದೆ. ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಬಳ್ಳಾರಿ ಹಾಗೂ ಶಿವಮೊಗ್ಗ ನಗರಗಳನ್ನು ಒಳಗೊಂಡ ಈ ವಲಯಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶ ಹೊಂದಲಾಗಿದೆ.
ಭವಿಷ್ಯದಲ್ಲಿ ನಗರಗಳಿಗೆ ಅಗತ್ಯವಿರುವ ಮೂಲಸೌಕರ್ಯಗಳ ಕೊರತೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಯೋಜನೆಯ ಮೂಲಕ ರಾಜ್ಯದ ನಗರೀಕರಣಕ್ಕೆ ದೀರ್ಘಕಾಲೀನ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ತಿಳಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಾಯಕತ್ವ ಮತ್ತು ಮಾರ್ಗದರ್ಶನದಲ್ಲಿ ಕರ್ನಾಟಕವನ್ನು ಮೂಲಸೌಕರ್ಯ ಹಾಗೂ ನಗರಾಭಿವೃದ್ಧಿ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದ ಮಾದರಿ ರಾಜ್ಯವನ್ನಾಗಿ ರೂಪಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಯೋಜನೆಯ ವರದಿಯನ್ನು ಬಿಡುಗಡೆ ಮಾಡಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಬಿ.ಬಿ. ಕಾವೇರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.




One Comment