ರಾಜ್ಯ

ಕಬ್ಬಿಗೆ ₹5,500 ಬೆಲೆ ನಿಗದಿಗೆ ಪಟ್ಟು; ಉತ್ತರ ಕರ್ನಾಟಕ ಬಂದ್!

ಬೆಳಗಾವಿ: ಕಬ್ಬಿಗೆ ಪ್ರತಿ ಟನ್‌ಗೆ 5,500 ರೂಪಾಯಿ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಕಳೆದ 15 ದಿನಗಳಿಂದ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ರೈತ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳ ಹಲವು ಕಡೆ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಿಂದ ಬಸ್ ಸಂಚಾರ, ಸಾರ್ವಜನಿಕರ ಓಡಾಟ ಹಾಗೂ ವ್ಯಾಪಾರ ವಹಿವಾಟಿಗೆ ಅಡ್ಡಿಯುಂಟಾಗಿದೆ.

ಬೆಳಗಾವಿಯಲ್ಲಿ 27ಕ್ಕೂ ಹೆಚ್ಚು ಕಡೆ ಪ್ರತಿಭಟನೆ!

ಕಬ್ಬಿನ ಬೆಲೆ ಹೆಚ್ಚಳಕ್ಕೆ ಒತ್ತಾಯಿಸಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವುದಾಗಿ ರೈತ ಸಂಘಟನೆಗಳು ಈ ಹಿಂದೆ ಘೋಷಿಸಿದ್ದವು. ಆದರೆ ಎನ್‌ಎಚ್‌-04 ಹೆದ್ದಾರಿ ಬಂದ್ ಮಾಡದಂತೆ ಬೆಳಗಾವಿ ಜಿಲ್ಲಾಡಳಿತ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ರೈತರು ಹೆದ್ದಾರಿ ಬಂದ್ ನಿರ್ಧಾರ ಕೈಬಿಟ್ಟು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 27 ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿಯೂ ರೈತ ಮುಖಂಡರು ಬಸ್‌ಗಳನ್ನು ತಡೆದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಥಣಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ರೈತರು ಪ್ರತಿಭಟನೆ ನಡೆಸಿದ್ದು, ಸಂಕೇಶ್ವರ–ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿಯೂ ರಸ್ತೆ ತಡೆದು ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದಾರೆ. ಹಲವು ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಮುಚ್ಚಿ ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ. ಗ್ರಾಮೀಣ ಭಾಗಗಳಿಗೆ ತೆರಳುವ ಬಸ್‌ಗಳ ಸಂಚಾರಕ್ಕೆ ಅಡ್ಡಿಯಾಗಿದ್ದರಿಂದ ಪ್ರಯಾಣಿಕರು ಪರದಾಡುವಂತಾಗಿದೆ.

ಬಾಗಲಕೋಟೆಯಲ್ಲಿ ರೈತರು-ಪೊಲೀಸರ ನಡುವೆ ವಾಗ್ವಾದ!

ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ರಾಸ್ ಬಳಿ ರೈತರು ಹೆದ್ದಾರಿಗೆ ಅಡ್ಡಲಾಗಿ ಕಲ್ಲು ಮತ್ತು ಮುಳ್ಳುಗಳನ್ನು ಹಾಕಿ, ಟ್ರ್ಯಾಕ್ಟರ್‌ಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ರೈತರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದ್ದಾರೆ.

ಹಾವೇರಿಯಲ್ಲಿ ಅರೆಬೆತ್ತಲೆ ಪ್ರತಿಭಟನೆ!

ಇತ್ತ ಹಾವೇರಿ ಜಿಲ್ಲೆಯಲ್ಲಿಯೂ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ. ಕಂಚಾರಗಟ್ಟಿ ಕ್ರಾಸ್ ಬಳಿ ರೈತರು ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಮೊಳಕಾಲ್ಮೂರು–ಶಿರಸಿ ರಸ್ತೆಯಲ್ಲಿಯೂ ಸಂಚಾರಕ್ಕೆ ಅಡ್ಡಿಯಾಗಿದೆ.

ಕೆಲವು ರೈತರು ಅರೆಬೆತ್ತಲೆ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಕೆಲವೆಡೆ ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸಿರುವ ಆರೋಪಗಳೂ ಕೇಳಿಬಂದಿವೆ. ಕೆಲವು ಶಾಲಾ-ಕಾಲೇಜು ವಿದ್ಯಾರ್ಥಿಗಳು ಕೂಡ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಧಾರವಾಡ, ಚಿಕ್ಕೋಡಿಯಲ್ಲೂ ಬಂದ್ ಬಿಸಿ!

ಧಾರವಾಡ ತಾಲೂಕಿನ ನಿಗದಿ ಗ್ರಾಮದಲ್ಲಿಯೂ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಚಿಕ್ಕೋಡಿ ಉಪವಿಭಾಗದ ವಿವಿಧ ಪ್ರದೇಶಗಳಲ್ಲಿಯೂ ಕರ್ನಾಟಕ ಬಂದ್‌ಗೆ ಬೆಂಬಲ ವ್ಯಕ್ತವಾಗಿದೆ. ಹಲವು ರಾಜ್ಯ ಹೆದ್ದಾರಿಗಳಲ್ಲಿ ರೈತರು ಪ್ರತಿಭಟನೆ ನಡೆಸಿದ್ದರಿಂದ ಬಸ್ ಸಂಚಾರ ಸ್ಥಗಿತಗೊಂಡಿದೆ. ಕೆಲವು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಹಲವು ಕಡೆ ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ವ್ಯಾಪಾರ ವಹಿವಾಟು ಕೂಡ ಬಹುತೇಕ ಸ್ಥಗಿತಗೊಂಡಿದೆ.

ಟನ್‌ಗೆ ₹5,500 ನೀಡುವಂತೆ ರೈತರ ಪಟ್ಟು!

ಕಬ್ಬಿಗೆ ಪ್ರತಿ ಟನ್‌ಗೆ 5,500 ರೂಪಾಯಿ ಬೆಲೆ ನಿಗದಿಪಡಿಸಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ. ಕಳೆದ 15 ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರದಿಂದ ಸೂಕ್ತ ಸ್ಪಂದನೆ ಸಿಕ್ಕಿಲ್ಲ ಎಂಬುದು ರೈತರ ಆಕ್ಷೇಪ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಒಟ್ಟಿನಲ್ಲಿ, ಕಬ್ಬಿನ ಬೆಲೆ ಹೆಚ್ಚಳದ ಬೇಡಿಕೆ ಇದೀಗ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತೀವ್ರ ಹೋರಾಟದ ರೂಪ ಪಡೆದುಕೊಂಡಿದೆ. ರೈತರ ಪ್ರತಿಭಟನೆಯಿಂದ ಜನಜೀವನಕ್ಕೂ ಬಿಸಿ ತಟ್ಟಿದ್ದು, ಸರ್ಕಾರ ರೈತರ ಬೇಡಿಕೆಗೆ ಯಾವ ರೀತಿಯಲ್ಲಿ ಸ್ಪಂದಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

Related Articles

Leave a Reply

Your email address will not be published. Required fields are marked *

Back to top button

You cannot copy content of this page

Adblock Detected

Please consider supporting us by disabling your ad blocker